CM Siddaramaiah: ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneet Rajkumar) ಅವರ ಕುರಿತಾಗಿ ಮಾಡಿದ್ದಂತಹ ಅವಹೇಳನಕಾರಿ ಪೋಸ್ಟ್ ಒಂದರ ವಿಚಾರವು ಕಳೆದ ಕೆಲವು ದಿನಗಳಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಮತ್ತು ಮಾದ್ಯಮಗಳ ಸುದ್ದಿಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇಂತಹುದೊಂದು ಕುಕೃತ್ಯ ಮಾಡಿದವರ ವಿರುದ್ಧ ಸೂಕ್ತ ಮತ್ತು ಕಠಿಣ ಕ್ರಮವನ್ನು ಜರುಗಿಸಬೇಕೆಂದು ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಆಗ್ರಹವನ್ನು ಮಾಡುತ್ತಿದ್ದಾರೆ.
ಈ ವಿಷಯದ ಕುರಿತಾಗಿ ರಾಜ್ಯದ ಮುಖ್ಯಮಂತ್ರಿಯವರಾದ ಸನ್ಮಾನ್ಯ ಸಿದ್ದರಾಮಯ್ಯನವರು (CM Siddaramaiah) ಸಹಾ ಟ್ಟೀಟ್ ಮಾಡಿದ್ದಾರೆ. ಸಿದ್ಧರಾಮಯ್ಯನವರು ತಮ್ಮ ಪೋಸ್ಟ್ ನಲ್ಲಿ, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ.
ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.
ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.